ಬೆಂಗಳೂರು: ಕರ್ನಾಟಕದ ಎಲ್ಲ ಸರಕಾರಿ ಶಾಲೆಗಳಲ್ಲಿ ಎಲ್ ಕೆಜಿ-ಯುಕೆಜಿ ಗಳ ಆರಂಭಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ,"ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲೂ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಿಸಬೇಕು ಎಂಬ ಬಗ್ಗೆ ಚರ್ಚೆ ನಡೆದು, ಒಮ್ಮತ ಮೂಡಿಬಂದಿದೆ. ಈ ಬಗ್ಗೆ ಘಟನೋತ್ತರ ಅನುಮತಿ ನೀಡಿ ಅಗತ್ಯ ಮೂಲ ಸೌಕರ್ಯ ಮತ್ತು ಸಿಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲು ಸಂಪುಟ ಒಪ್ಪಿಗೆ ನೀಡಿತು" ಎಂದು ತಿಳಿಸಿದ್ದಾರೆ.
ಡಿಜಿಟಲ್ ಲರ್ನಿಂಗ್ ಯೋಜನೆ ಬಗ್ಗೆ ತಿಳಿಸಿದ ಅವರು, 2020-21ನೇ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು , ಸರಕಾರಿ ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಡಿಜಿಟಲ್ ಲರ್ನಿಂಗ್ ಯೋಜನೆಯನ್ನು ಈ ವರ್ಷದಿಂದ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. 430 ಪ್ರಥಮ ದರ್ಜೆ ಕಾಲೇಜು, 87 ಸರಕಾರಿ ಪಾಲಿಟೆಕ್ನಿಕ್ ಮತ್ತು 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 35 ಕೋ.ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.