ನವದೆಹಲಿ: ಕೋವಿಡ್-19 ಪಿಡುಗಿನ ಸಂದರ್ಭದಲ್ಲೇ ನೀಟ್ ಹಾಗೂ ಜೆಇಇ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದ ತೀರ್ಪನ್ನು ಪುನರ್‌ಪರಿಶೀಲಿಸುವಂತೆ ಕೋರಿ ಆರು ರಾಜ್ಯಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಇತ್ತೀಚೆಗೆ ನಡೆದ ಸೋನಿಯಾಗಾಂಧಿ ನೇತೃತ್ವದ ಸಭೆಯಲ್ಲಿ ಆರು ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಾಗಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದರು. ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಈ ಹಿಂದೆ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸಬೇಕು, ಕೊರೊನಾ ಸೋಂಕು ಹರಡುತ್ತಿರುವ ಈ ಸಮಯದಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಆದೇಶ ಹೊರಡಿಸಬೇಕು ಎಂದು ಕೋರಲಾಗಿತ್ತು ಎನ್ನಲಾಗಿದೆ.
ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ ಎಂದು ಆಗಸ್ಟ್ 17ರಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿತ್ತು. ಇದನ್ನು ಪುನರ್‌ಪರಿಶೀಲಿಸಬೇಕು ಎಂದು ಪಶ್ಚಿಮ ಬಂಗಾಳ, ಜಾರ್ಖಂಡ್, ರಾಜಸ್ಥಾನ, ಚತ್ತೀಸ್‌ಗಢ, ಪಂಜಾಬ್ ಹಾಗೂ ಮಹಾರಾಷ್ಟ್ರ ಮನವಿ ಸಲ್ಲಿಸಿದ್ದವು.