ಪುತ್ತೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನೇ ಸರ್ವೋಚ್ಛ ಸ್ಥಾನವನ್ನು ಹೊಂದಿರುತ್ತಾನೆ. ಚುನಾವಣೆಗಳು ನಡೆಯುವ ಸಂದರ್ಭದಲ್ಲಿ ತನ್ನ ಅಮೂಲ್ಯವಾದ ಮತ ಚಲಾವಣೆ ಮಾಡುವ ಮೂಲಕ ದೇಶದ ಆಡಳಿತ ವ್ಯವಸ್ಥೆ ನಿರ್ಧರಿಸುವಲ್ಲಿ ಮತದಾರ ಪ್ರಮುಖ ಪಾತ್ರ ವಹಿಸುತ್ತಾನೆ ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಹೇಳಿದರು.

ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್‍ನ ಆಶ್ರಯದಲ್ಲಿ ಜನವರಿ 25 ರಂದು ಸ್ನಾತಕೋತ್ತರ ಸಭಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಒಂದು ರಾಷ್ಟ್ರವು ಬಲಿಷ್ಠ ಮತ್ತು ಶ್ರೀಮಂತ ಸ್ಥಾನಮಾನವನ್ನು ಹೊಂದಲು ನಾಗರಿಕರ ಪಾಲು ಅಮೂಲ್ಯವಾದುದು. ಪ್ರತಿಯೊಬ್ಬ ಪ್ರಜೆಯೂ ತನ್ನ ಹಕ್ಕು ಮತ್ತು ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದಾಗ ಭಾರತವು ವಿಶ್ವ ಗುರುವಿನ ಸ್ಥಾನವನ್ನು ಹೊಂದಲು ಸಾಧ್ಯ ಎಂದು ಹೇಳಿ, ‘ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ’ ಎಂದು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್‍ನ ಸಂಯೋಜಕ ದಿನಕರ ರಾವ್ ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆಯು ಅತ್ಯಂತ ಪ್ರಧಾನ ಅಂಗ. ಇಲ್ಲಿ ಪ್ರಜೆಗಳೇ ಪ್ರಭುಗಳಾಗಿರುತ್ತಾರೆ. ಮತದಾರ ಮತದಾನ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಸುಭದ್ರ ಆಡಳಿತ ವ್ಯವಸ್ಥೆಗೆ ತನ್ನ ಮಹತ್ತರ ಕೊಡುಗೆಯನ್ನು ನೀಡವ ಜವಾಬ್ದಾರಿಯನ್ನು  ಹೊಂದಿರುತ್ತಾನೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರು,  ಆಡಳಿತ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.