ಮಂಗಳೂರು: ದಾಖಲೀಕರಣ ಕಾರ್ಯಕ್ಕೆ ತನ್ನದೇ ಆದ ಮಹತ್ವವಿದೆ. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಸಂಘ, ಸಂಸ್ಥೆಗಳ ಸಾಧನೆ ಶಾಶ್ವತ ದಾಖಲೆಯಾಗಿ ಮೂಡಿ ಬಂದರೆ ಮುಂದಿನ ಪೀಳಿಗೆಗೆ ಸ್ಪೂರ್ತಿಯ ಸೆಲೆಯಾಗಲು ಸಾಧ್ಯವಿದೆ ಎಂದು ಅನಿವಾಸಿ ಭಾರತೀಯ ಇಂಜಿನಿಯರ್ ಮಂಜೇಶ್ವರ ಮೋಹನ್‌ದಾಸ್  ಕಾಮತ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ  ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ‘ ಇ-ಪೇಪರ್ ಇದರ ಆರನೇ ಸಂಚಿಕೆಯ  ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನೂತನ ಸಂಚಿಕೆ ಬಿಡುಗಡೆ ಮಾಡಿದ ಹಿರಿಯ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ಮಾತನಾಡಿ ‘ ಪತ್ರಕರ್ತರಿಗೆ ಕಾನೂನಿನ ಮಾಹಿತಿ ಅವಶ್ಯವಾಗಿದ್ದು ,ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಕಾನೂನುಗಳ ಬಗ್ಗೆ ಬೆಳಕು ಚೆಲ್ಲುವ ಲೇಖನಗಳನ್ನು ಪ್ರಕಟಿಸಲು ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು.

ಪ್ರೆಸ್‌ಕ್ಲಬ್  ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.