ಉಡುಪಿ:  ಮಕ್ಕಳಲ್ಲಿ  ಕಂಡು ಬರುವ ದಡಾರ ರೂಬೆಲ್ಲಾ ರೋಗವನ್ನು ಜಿಲ್ಲೆಯಿಂದ ಸಂಪೂರ್ಣ ನಿರ್ಮೂಲನೆ ಮಾಡುವ ಕುರಿತು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ನಡೆದ ಜಿಲ್ಲಾ  ಎಂ.ಆರ್.ಎಲಿಮಿನೇಷನ್ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಡಾರ ರುಬೆಲ್ಲಾ ಕಾಯಿಲೆಯು 5 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚು ಅಪಾಯಕಾರಿಯಾಗಿದ್ದು, ದಡಾರ ತೀವ್ರ ಸಾಂಕ್ರಾಮಿಕ ರೋಗವಾಗಿದ್ದು, ಇದರಿಂದ ಮಕ್ಕಳಲ್ಲಿ ಜ್ವರ ಕಾಣಿಸಿಕೊಳ್ಳಲಿದೆ ಮತ್ತು ಚರ್ಮದ ಮೇಲೆ ಕೆಂಪು ದದ್ದುಗಳು ಉಂಟಾಗಲಿದೆ. ಈ ರೋಗವು ಲಸಿಕೆ ಪಡೆಯದ ಮಕ್ಕಳಲ್ಲಿ ಹೆಚ್ಚು ಅಪಾಯಕಾರಿಯಾಗಲಿದ್ದು, ಮಕ್ಕಳ ಮರಣಕ್ಕೂ ಕಾರಣವಾಗಬಹುದಾಗಿರುವುದರಿಂದ ಜಿಲ್ಲೆಯ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ  ಈ ರೋಗ ಕಂಡುಬರದಂತೆ ಲಸಿಕೆ ನೀಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

  ವಿಶ್ವದಲ್ಲೇ  ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಡಾರ ರೂಬೆಲ್ಲಾ ಪ್ರಕರಣಗಳು ವರದಿಯಾಗುತ್ತಿದ್ದು, ಜಿಲ್ಲೆಯಲ್ಲಿ ಈ ವರ್ಷದ ಮೇ ಅಂತ್ಯದವರೆಗೆ 59 ಪ್ರಕರಣಗಳು ವರದಿಯಾಗಿದೆ. ಆದ್ದರಿಂದ ಜಿಲ್ಲೆಯಲ್ಲಿನ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ನೀಡುವ ಕುರಿತಂತೆ ಕ್ರಿಯಾ ಯೋಜನೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಈ ರೋಗದ ಲಕ್ಷಣಗಳು ಮತ್ತು ನಿರ್ಮೂಲನೆ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತರಬೇತಿ ಕಾಂiÀರ್iಕ್ರಮಗಳನ್ನು ಆಯೋಜಿಸಿ, ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪೋಷಕರಿಗೆ ಈ ಬಗ್ಗೆ ಜಾಗೃತಿ ಮೂಡಿಸುವಂತೆ ಮತ್ತು ಅಂತಹ ರೋಗ ಲಕ್ಷಣಗಳು ಇರುವ ಮಕ್ಕಳು ಕಂಡು ಬಂದಲ್ಲಿ ಕೂಡಲೇ ಅಗತ್ಯ ಚಿಕಿತ್ಸೆಗೆ ಕರೆತರಲು ಸೂಚಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಮಿಕಇಲಾಖೆಯ ಮೂಲಕ ವಲಸೆ ಕಾರ್ಮಿಕರ ಮಕ್ಕಳು ದಡಾರ ರೂಬೆಲ್ಲಾ ಲಸಿಕೆ ಪಡೆಯುವ ಕುರಿತಂತೆ ಅವರು ಕೆಲಸ ಮಾಡುವ ಪ್ರದೇಶಗಳಿಗೆ ತೆರಳಿ ಅರಿವು ಮೂಡಿಸುವಂತೆ ಮತ್ತು ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲಾ  ಖಾಸಗಿ ನರ್ಸಿಂಗ್ ಹೋಂ ಗಳು ಮತ್ತು ಕ್ಲಿನಿಕ್ ಗಳು ತಮ್ಮಲ್ಲಿಗೆ ಬರುವ ಮಕ್ಕಳಲ್ಲಿ ದಡಾರ ರೂಬೆಲ್ಲಾ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮತ್ತು ಪೋಷಕರಿಗೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.       

ದಡಾರ ರೂಬೆಲ್ಲಾ ರೋಗದ ವಿರುದ್ದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನುಆಯೋಜಿಸುವಂತೆ ಅರೋಗ್ಯ ಇಲಾಖೆಗೆ ಸೂಚನೆ ನೀಡಿದ  ಜಿಲ್ಲಾಧಿಕಾರಿಗಳು , ಜಿಲ್ಲೆಯ ಯಾವುದೇ ಮಗು  ಈ ರೋಗಕ್ಕೆ ತುತ್ತಾಗದಂತೆ , ಜಿಲ್ಲೆಯನ್ನು ದಡಾರ ರೂಬೆಲ್ಲಾ ರೋಗ ಮುಕ್ತವಾಗಿಸಲು ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಎಂ ಜಿ.ರಾಮ, ವಿಶ್ವಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ.ಅನಂತೇಶ್, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.