ಉಡುಪಿ: ಜನಸಾಮಾನ್ಯರು ಮೂಲಭೂತ ಪ್ರಾಥಮಿಕ ಆರೋಗ್ಯ ಸೇವೆಗಾಗಿ ದೂರ ಪ್ರಯಾಣಿಸದೇ ಜನವಸತಿ ಪ್ರದೇಶದಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್‍ನಲ್ಲಿ ಸುಲಭವಾಗಿ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಶಾಸಕ ಯಶ್‍ಪಾಲ್ ಎ ಸುವರ್ಣ ತಿಳಿಸಿದರು. 

ಅವರು ಶುಕ್ರವಾರ ನಗರದ ಗುಂಡಿಬೈಲು ದೊಡ್ಡನಗುಡ್ಡೆಯಲ್ಲಿ ನಮ್ಮ ಕ್ಲಿನಿಕ್ ಘಟಕವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಜನರಿಗೆ ನೆರವಾಗುವಂತೆ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ನಮ್ಮ ಕ್ಲಿನಿಕ್ ಎಂಬ ಉಚಿತ ಆರೋಗ್ಯ ಸೇವಾ ವ್ಯವಸ್ಥೆಯನ್ನು ಸ್ಥಾಪಿಸಲಾಗಿದ್ದು, ನಮ್ಮ ಕ್ಲಿನಿಕ್ ಸ್ಥಾಪನೆಯಿಂದ ಸರಕಾರಿ ಆಸ್ಪತ್ರೆಗಳ ಮೇಲಿರುವ ಒತ್ತಡವು ಕಡಿಮೆಯಾಗಲಿದೆ ಎಂದರು.

ಉಡುಪಿ ತಾಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಕ್ಲಿನಿಕ್ ನಲ್ಲಿ ಒಟ್ಟು 12 ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತದೆ. ಇದರಲ್ಲಿ ವೈದ್ಯಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞರು, ಶುಶ್ರೂಷಣಾಧಿಕಾರಿ, ಗ್ರೂಪ್ ಡಿ ನೌಕರರು ತಲಾ ಒಬ್ಬರಂತೆ ಬೆಳಗ್ಗೆ 9 ಗಂಟೆಯಿಂದ ಸಂಜೆ 4.30 ರ ವರೆಗೆ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  

ಕಾರ್ಯಕ್ರಮದಲ್ಲಿ ನಗಾರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ  ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಜಿ ಹುಬ್ಬಳ್ಳಿ, ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಬೆಂಗಳೂರು ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ, ನಮ್ಮ ಕ್ಲಿನಿಕ್ ವೈದ್ಯಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ, ವಂದಿಸಿದರು.