ಉಡುಪಿ: ಉಡುಪಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧ್ಯಕ್ಷತೆಯಲ್ಲಿ ನಡೆಯಿತು.
ಗಣರಾಜ್ಯೋತ್ಸವ ಕಾರ್ಯಕ್ರಮವು ಜನವರಿ 26 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಸಮಾರಂಭದಲ್ಲಿ ಪೊಲೀಸ್, ಅರಣ್ಯ, ಗೃಹ ರಕ್ಷಕ, ಎನ್.ಸಿ.ಸಿ.ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರ ಶಾಲಾ ವಿದ್ಯಾಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ ಶ್ರೇಷ್ಠ ಕೃಷಿಕ ಪ್ರಶಸ್ತಿ ವಿತರಣೆ ಮಾಡಲಾಗುವುದು ಎಂದರು.
ಕಾರ್ಯಕ್ರಮಕ್ಕೆ ಜನ ಪ್ರತಿನಿಧಿಗಳು, ಗಣ್ಯರು ಸೇರಿದಂತೆ ಶಿಷ್ಠಾಚಾರದಂತೆ ಎಲ್ಲರನ್ನೂ ಆಹ್ವಾನಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.