ಉಡುಪಿ,(ಡಿಸೆಂಬರ್ 23): ಯುವಜನಾಂಗಕ್ಕೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವದಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು.

 ಅವರು ಇಂದು ಅಜ್ಜರಕಾಡು ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ನಡೆದ  ಉಡುಪಿ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು.  

ಯುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರತಿಬಿಂಬಿಸಿ ಬೆಳೆಸುವ ಉದ್ಧೇಶ ಯುವ ಜನೋತ್ಸವ ಕಾರ್ಯಕ್ರಮದ್ದಾಗಿದ್ದು, ಯುವಜನಾಂಗಗಳು ಒಂದುಗೂಡಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದರು.

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಸಹ ಕಲಾತ್ಮಕ ರೀತಿಯ ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಹೊರತರಲು ವಿವಿಧ ಆಯಾಮಗಳಲ್ಲಿ ಕೌಶಲ್ಯಗಳನ್ನು ವೃದ್ಧಿಗೊಳಿಸುವ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯುವಕ ಯುವತಿಯರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ರಾಜೇಂದ್ರ.ಕೆ,  ಕಾಲೇಜಿನ ಪ್ರಾಧ್ಯಾಪಕ ನಿತ್ಯಾನಂದ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯ ಅಧಿಕಾರಿ ವಿಲ್ ಫ್ರೆಡ್ ಡಿ ಸೋಜ ವಂದಿಸಿದರು.